Political

ಮೋದಿಯಿಂದ ಭಾರತೀಯ ಸೇನೆಯ ಅಪಮಾನ : ಎಚ್ಕೆ ಪಾಟೀಲ್ ಆರೋಪ ರಾಷ್ಟ್ರಪತಿ – ಚುನಾವಣಾ ಆಯೋಗದ ಮೌನ ಅಚ್ಚರಿ ತಂದಿದೆ

April 8, 2019

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ರಾಜಸ್ಥಾನದ ರಾಜ್ಯಪಾಲ ಕಲ್ಯಾಣಸಿಂಗ್ ಹಾಗೂ ನೀತಿ ಆಯೋಗದ ಉಪಾಧ್ಯಕ್ಷರು ಸಂವಿಧಾನಿಕ ಹುದ್ದೆಯಲ್ಲಿದ್ದರೂ ಸ್ಥಾನ ಜವಾಬ್ದಾರಿ ಮರೆತು ಮಾದರಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಇವರನ್ನು ಕೂಡಲೇ ಅವರ ಹುದ್ದೆಯಿಂದ ವಜಾ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ಮತ್ತು ವರದಿಗಾರರ ಕೂಟದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ‘ಸಂವಾದ ಗೋಷ್ಠಿ’ಯಲ್ಲಿ ಈ ಒತ್ತಾಯ ಮಾಡಿದ ಅವರು, ಎಲ್ಲವೂ ಗೊತ್ತಿದ್ದರೂ ಕೇಂದ್ರ ಚುನಾವಣಾ ಆಯೋಗ ಮೌನಕ್ಕೆ ಶರನಾಗಿರುವುದು ನೋಡಿದರೆ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂಬ ಸಂದೇಹ ಮೂಡಿದೆ ಎಂದು ದೂರಿದರು. ಪ್ರಧಾನಿ ನರೇಂದ್ರ ಮೋದಿ ಅವರು ‘ಸೇನೆ’ಯ ಸಮವಸ್ತ್ರ ಮಾದರಿ ಧರಿಸಿ ಪ್ರಚಾರ ಸಭೆ ನಡೆಸಿದ್ದು ಇಡೀ ಭಾರತೀಯ ಸೇನೆಗೆ ಅಪಮಾನ ಮಾಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾರತೀಯ ಸೇನೆಯನ್ನು ‘ಮೋದಿ ಸೇನೆ’ ಎಂದು ಹೇಳುವ ಮೂಲಕ ಅಪಮಾನಗೊಳಿಸಿದ್ದಾರೆ. ಉಭಯರೂ ದೇಶ ದ್ರೋಹಿ ಕೆಲಸವನ್ನು ಮಾಡಿದ್ದೂ ಕೂಡಲೇ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇನ್ನು ಕಲ್ಯಾಣ ಸಿಂಗ್ ಅವರು ಸಂವಿಧಾನಿಕ ರಾಜ್ಯಪಾಲ ಹುದ್ದೆಯಲ್ಲಿದ್ದರೂ ಬಹಿರಂಗವಾಗಿ ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ಅಗತ್ಯ ದಾಖಲೆಗಳೊಂದಿಗೆ ದೂರ ಸಲ್ಲಿಸಿ ರಾಜ್ಯಪಾಲ ಹುದ್ದೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯ ಮಾಡಿದ್ದರೂ ರಾಷ್ಟ್ರಪತಿಗಳು ಇದನ್ನು ಗೃಹ ಇಲಾಖೆಗೆ ರವಾನಿಸಿರುವುದು ಅಚ್ಚರಿಯ ಸಂಗತಿಯಾಗಿದೆ. ನೀತಿ ಆಯೋಗದ ಉಪಾಧ್ಯಕ್ಷರು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಒಂದು ವೇಳೆ ಅವರಿಗೆ ರಾಜಕೀಯದಲ್ಲಿ ಆಸಕ್ತಿ ಇದ್ದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಹಿರಂಗ ಪ್ರಚಾರಕ್ಕೆ ಬರಲಿ. ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಸಂವಿಧಾನಿಕ ಹುದ್ದೆಯಲ್ಲಿದ್ದೂ ಕೊಂಡೇ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದು ಖಂಡನೀಯ ಮತ್ತು ಅಪರಾಧವಾಗಿದೆ. ಇವೆಲ್ಲ ಘಟನೆಗಳನ್ನು ಸಾಕ್ಷಾಧಾರ ಸಮೇತವಾಗಿ ಕಾಂಗ್ರೆಸ್ ಪಕ್ಷವು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ಈ ರೀತಿ ಮಾತನಾಡದಂತೆ ಕೇವಲ ಸಲಹೆ ನೀಡಿದ್ದು ಅಚ್ಚರಿ ಮೂಡಿಸಿದೆ ಎಂದು ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಚುನಾವಣಾ ಆಯೋಗವು ದೇಶದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಮೈತ್ರಿ ಸರ್ಕಾರದ ಸಾಧನೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವು ರಾಜ್ಯದ ರೈತರ ಕೃಷಿ ಸಾಲವನ್ನು (40 ಸಾವಿರ ಕೋಟಿ ರೂ.) ಮನ್ನಾ ಮಾಡುವ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಿದೆ. ಹಿಂದೆ ಡಾ.ಮನಮೋಹನ ಸಿಂಗ್ ಅವರು ದೇಶದ ರೈತರ ಕೃಷಿ ಸಾಲ 72 ಸಾವಿರ ಕೋಟಿ ರೂ.ಗಳನ್ನು ಮನ್ನಾ ಮಾಡಿದ್ದಾರೆ. ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅನ್ನಭಾಗ್ಯ, ಕೃಷಿ ಭಾಗ್ಯ, ಕ್ಷೀರ ಭಾಗ್ಯ, ಮನಸ್ವಿನಿ, ಯಶಸ್ವಿನಿ, ಇಂದಿರಾ ಕ್ಯಾಂಟೀನ್ ಸೇರಿದಂತೆ ಹತ್ತು ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಬಯಲು ಬಹಿರ್ದೆಸೆ ಮುಕ್ತ ಕರ್ನಾಟಕ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ಸತತ ನಾಲ್ಕು ವರ್ಷಗಳ ಕಾಲ ಅತ್ಯುತ್ತಮ ಯೋಜನೆ ಎಂದು ಪ್ರಶಸ್ತಿ ಪಡೆದುಕೊಂಡಿದೆ. ಶುದ್ಧ ಕುಡಿಯುವ ನೀರು ಪೂರೈಕೆ ಘಟಕ ಯೋಜನೆಯು ಇಡೀ ದೇಶಕ್ಕೆ ಮಾದರಿಯನ್ನಾಗಿ ಪರಿಗಣಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ತಮ್ಮ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದ್ದ ಪ್ರಮುಖ ಯೋಜನೆಗಳನ್ನು ವಿವರಿಸಿದರು. .


Related Post

Category Archive